ಹೊಸಪೇಟೆ(ವಿಜಯನಗರ),ಡಿ.17 ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹರಪನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಬಾಗಳಿ ಗ್ರಾಮದಲ್ಲಿ ಶನಿವಾರ ಗ್ರಾಮವಾಸ್ತವ್ಯ ನಡೆಸಿದರು.ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಗ್ರಾಮದೆಲ್ಲೆಡೆ ಸಂಚರಿಸಿ ರಸ್ತೆಗಳು, ಚರಂಡಿ, ಸ್ವಚ್ಛತೆ ಹಾಗೂ ಇನ್ನೀತರ ಮೂಲಸೌಕರ್ಯ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿದರು.
ಬಾಗಳಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಡುಗೆ ಕೋಣೆ, ಶೌಚಾಲಯವನ್ನು ಪರಿಶೀಲಿಸಿದಾಗ ಎಲ್ಲವೂ ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಗ್ರಾಮವಾಸ್ತವ್ಯ ನಡೆಸುವುದಕ್ಕಿಂತ ಕೆಲವು ದಿನಗಳ ಮುಂಚೆಯೇ ಗ್ರಾಮಕ್ಕೆ ತಹಸೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿ ಪಿಂಚಣಿ, ಪಹಣಿ, ದಾಖಲೆಗಳ ತಿದ್ದುಪಡಿ, ರೇಶನ್ ಕಾರ್ಡ್ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಬಗೆಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ತಿಳಿಸಿದರು.
08 ಜನ ವೃದ್ಧರನ್ನು ವಯಸ್ಕರ ಪಿಂಚಣಿ ಯೋಜನೆಗೆ ಆಯ್ಕೆ ಮಾಡಲಾಗಿದ್ದು, ಎಲ್ಲಾ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಪಿಂಚಣಿ ಪ್ರಮಾಣ ಪತ್ರವನ್ನು ನೀಡಲಾಯಿತು.
ಬಾಗಳಿಯಲ್ಲಿ ಕೆಲವು ಜನರಿಗೆ ನಿವೇಶನ ಇಲ್ಲದವರು ಅರ್ಜಿ ಸಲ್ಲಿಸಿದ್ದು, ಅವರಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ಕಟ್ಟಿಸಿ ಕೊಡಲು ಖಾಲಿ ಸ್ಥಳವನ್ನು ಗುರುತಿಸಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಿದರು.ಗ್ರಾಮದಲ್ಲಿ ಪಹಣಿ, ನಿವೇಶನ, ನೂತನ ಮನೆ, ಶೌಚಾಲಯ, ಇನಾಮು ರದ್ದತಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರುಗಳನ್ನು ಪ್ರಸ್ತಾಪಿಸಿದರು.
ಎಲ್ಲರ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದ ಡಿಸಿ ಟಿ.ವೆಂಕಟೇಶ್ ಅವರು ತಮ್ಮ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು ಎಂದು ಜನರಿಗೆ ಅಶ್ವಾಸನೆ ನೀಡಿದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಬಾಗಳಿ ಗ್ರಾಮದಲ್ಲಿ ಸಹ ಎಲ್ಲಾ ಗ್ರಾಮಗಳಂತೆ ಇಲ್ಲಿಯೂ ಕೆಲ ಸಮಸ್ಯೆಗಳಿದ್ದು ಶೀಘ್ರದಲ್ಲಿ ಪರಿಹರಿಸಲಾಗುವುದು ಎಂದರು.ಸಾರ್ವಜನಿಕರಿಗೆ ಯಾವುದಾದರೂ ತೊಂದರೆಗಳಿದ್ದಲ್ಲಿ ನೇರವಾಗಿ ಬಂದು ನಮ್ಮ ಬಳಿ ತಿಳಿಸಿ ಅದಕ್ಕೆ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸಿ ನೀಡಿದರು.
ಊರಿನ ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಒಳಗೊಂಡAತೆ ಇತರೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಿಡಿಒ ಹಾಗೂ ಸಂಬAಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ವಹಿಸುವಂತೆ ಈ ಸಂದರ್ಭದಲ್ಲಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ನಿಮಿತ್ತ ವೇದಿಕೆ ಆವರಣದಲ್ಲಿ ಹಾಕಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಅಭಿಯಾನ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕ್ಷಯರೋಗದ ಕುರಿತು ಜಾಗೃತಿ ಅಭಿಯಾನ, ಕೃಷಿ-ತೋಟಗಾರಿಕೆ ಇಲಾಖೆಗಳ ವತಿಯಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ವಿಜಯನಗರ ಅಪರ ಜಿಲ್ಲಾಧಿಕಾರಿ ಟಿ.ವಿ.ಪ್ರಕಾಶ್, ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ಹರಪನಹಳ್ಳಿ ತಾ.ಪಂ.ಇಒ ಪ್ರಕಾಶ್, ತಹಶೀಲ್ದಾರ್ ಶಿವಕುಕುಮಾರ್ ಬೀರಾದರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್, ಡಿ.ಹೆಚ್.ಒ ಡಾ.ಸಲೀಂ, ಡಿಡಿಎಲ್‌ಆರ್ ಕುಸುಮ, ಬಾಗಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ಬಿ, ಉಪಾಧ್ಯಕ್ಷೆ ಹೆಚ್.ಗೀತಮ್ಮ, ಗ್ರಾಮ ಪಂಚಾಯಿತಿ ಪಿಡಿಒ, ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಇದ್ದರು.
––-*-