You are currently viewing ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ, ಚಿಕಿತ್ಸೆ ಪಲಿಸದೆ ಸಾವು..

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ, ಚಿಕಿತ್ಸೆ ಪಲಿಸದೆ ಸಾವು..

ಬೆಂಗಳೂರು: ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.

ಮಂಗಳವಾರ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಇದ್ದಾಗ ಎದೆ ನೋವು ಕಾಣಿಸಿಕೊಂಡಿದೆ.

ಕುಟುಂಬಸ್ಥರು ತಕ್ಷಣವೇ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದರು.

ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ,

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಶಾಸಕರಾಗಿದ್ದ ಕತ್ತಿಯವರು,

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಖಾತೆ ಸಚಿವರಾಗಿ ಸೇವೆ ಸಲ್ಲಿಸುತಿದ್ದರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿ ಇರುತಿದ್ದರು.

9 ಬಾರಿ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದರು.

1985ರಲ್ಲಿ ರಾಜಕೀಯಕ್ಕೆ ಪ್ರವೇಶಮಾಡಿದ ಉಮೇಶ್ ಕತ್ತಿ ಯವರು, ಬೆಳಗಾವಿಯ ಕೆಎಲ್‌ಇ ಸೊಸೈಟಿಯ ಲಿಂಗರಾಜ್ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದರು.

ಹುಕ್ಕೇರಿ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಜನತಾ ಪಕ್ಷದಿಂದ ಚುನಾವಣಾ ಕಣಕ್ಕಿಳಿದರು.

ಮೊದಲ ಪ್ರಯತ್ನದಲ್ಲೇ ಗೆಲುವು ಕಂಡರು.
ಎರಡನೆ ಬಾರಿ 1989ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಗೆದ್ದರು.

1994ರಲ್ಲಿಯೂ ಗೆದ್ದು ಹ್ಯಾಟ್ರಿಕ್ ಬಾರಿಸಿದರು. 1999ರಲ್ಲಿ ಸಂಯುಕ್ತ ಜನತಾದಳ (ಜೆಡಿಯು)ನಿಂದ ಸ್ಪರ್ಧಿಸಿ 4ನೇ ಬಾರಿ ಆಯ್ಕೆ.

2004ರಲ್ಲಿ ಕಾಂಗ್ರೆಸ್‌ ನಿಂದ ಸ್ಪರ್ಧಿಸಿ ಸೋಲು ರಾಜಕೀಯ ಜೀವನದಲ್ಲಿ ಇದೊಂದೇ ಚುನಾವಣೆಯಲ್ಲಿ ಉಮೇಶ್ ಕತ್ತಿ ಸೋಲು ಕಂಡಿದ್ದು.

2008ರಲ್ಲಿ ಜೆಡಿಎಸ್ ಸೇರಿದರು, ಗೆಲುವು ಕಂಡರು.
ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದರು.

ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 6ನೇ ಗೆಲುವು ಸಾಧಿಸಿದರು. 2013, 2018ರ ಚುನಾವಣೆಯಲ್ಲಿಯೂ ಹುಕ್ಕೇರಿ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದರು.

ಶಾಸಕರಾಗಿದ್ದ ತಂದೆ ವಿಶ್ವನಾಥ್ ಕತ್ತಿ ನಿಧನದಿಂದಾಗಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ 1996ರಲ್ಲಿ ಮೊದಲ ಬಾರಿಗೆ ಸಕ್ಕರೆ ಖಾತೆ ಸಚಿವರಾದರು.

2008ರಲ್ಲಿ ತೋಟಗಾರಿಕೆ ಮತ್ತು ಬಂಧಿಖಾನೆ ಸಚಿವರಾದರು.

2010ರಲ್ಲಿ ಕೃಷಿ ಸಚಿವರಾದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಕೀರ್ತಿ ಉಮೇಶ್ ಕತ್ತಿ ಅವರದ್ದು.

2019ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿದರು, ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಿಕ್ಕಿತು.


2021ರಲ್ಲಿಯೂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದರು. ಅರಣ್ಯ ಖಾತೆ ಸಚಿವರಾಗಿದ್ದರು.